ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ 2025ರ ಏಪ್ರಿಲ್ 26ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಗೆ ಅನುಗುಣವಾಗಿ ದೇಶಾದ್ಯಂತ 47 ಸ್ಥಳಗಳಲ್ಲಿ 15ನೇ ರೋಜ್ ಗಾರ್ ಮೇಳ ನಡೆಯಲಿದೆ. ಇದು ಯುವಜನರಿಗೆ ಅವರ ಸಬಲೀಕರಣಕ್ಕೆ ಅರ್ಥಪೂರ್ಣ ಅವಕಾಶ ನೀಡಲಿದೆ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಅನುವು ಮಾಡಿಕೊಡಲಿದೆ.
ದೇಶಾದ್ಯಂತ ನೇಮಕಾತಿಯಲ್ಲಿ ಹೊಸದಾಗಿ ಆಯ್ಕೆಯಾದವರು ಕೇಂದ್ರ ಸರ್ಕಾರದ ಕಂದಾಯ ಇಲಾಖೆ, ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರೈಲ್ವೆ ಸಚಿವಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಸೇವೆಗೆ ಸೇರಲಿದ್ದಾರೆ.


